ಕರ್ನಾಟಕಕ್ಕೆ ‘ಮಹಾ’ ಅನ್ಯಾಯದ ವಿರುದ್ಧ ಹೋರಾಟ 

0
808

 ಕರ್ನಾಟಕ ಬಂದ್, ಬೆಂಗಳೂರು ಸ್ತಬ್ಧ, ಅಮಾಯಕರ ಮೇಲೆ ಲಾಠಿ ಪ್ರಹಾರ

ಮಹದಾಯಿ ಮಧ್ಯಂತರ ತೀರ್ಪು ವಿರೋಧಿಸಿ ಕನ್ನಡಪರ ಸಂಘಟನೆಗಳು ಶನಿವಾರ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಂಗಳೂರಿನಲ್ಲಿ ಭರ್ಜರಿ ಬೆಂಬಲ ವ್ಯಕ್ತವಾಗಿದೆ. ಎಲ್ಲ ಕನ್ನಡಪರ, ರೈತಪರ, ದಲಿತಪರ, ಕಾರ್ಮಿಕ ಸಂಘಟನೆ ಹಾಗೂ ಕನ್ನಡ ಚಲನಚಿತ್ರೋದ್ಯಮ ಬೆಂಬಲ ನೀಡಲಾಗಿದೆ. ಈ  ಹೋರಾಟಕ್ಕೆ ಎಲ್ಲರೂ ಕೈ ಜೋಡಿಸಿದ್ದಾರೆ.

ಅಷ್ಟೇ ಅಲ್ಲ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ಮೈಸೂರು, ಮಂಡ್ಯ, ತುಮಕೂರುಗಳಲ್ಲಿಯೂ ಬಂದ್ ನಡೆಯುತ್ತಿದೆ. ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕಾರವಾರ ಸೇರಿದಂತೆ ರಾಜ್ಯದ ಹಲವೆಡೆ ಜನಜೀವನ ಯಥಾಸ್ಥಿತಿಯಲ್ಲಿ ಮುಂದುವರಿದಿದೆ.

ರಾಜಭವನಕ್ಕೆ ಮುತ್ತಿಗೆ ಹಾಕಲು ಬಂದ ಕನ್ನಡಪರ ಸಂಘಟನೆಗಳ ಕೆಲವು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಅಮಾಯಕರ ಮೇಲೆ ಲಾಠಿ ಪ್ರಹಾರ

ಖಾಕಿ ದರ್ಪಕ್ಕೆ ಆಕ್ರೋಶ: ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ವಿರೋಧಿಸಿ ಧಾರವಾಡದ ನವಲಗುಂದದ ಯಮನೂರ ಗ್ರಾಮದಲ್ಲಿ ನಡೆಯುತ್ತಿದ್ದ ಬಂದ್ ವೇಳೆ ಮುದುಕರು, ಮಹಿಳೆಯರು, ಗರ್ಭಿಣಿಯರ ಮೇಲೆ ಪೊಲೀಸರು ಅಮಾನುಷವಾಗಿ ಲಾಠಿ ಪ್ರಹಾರ ನಡೆಸಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮಾಧ್ಯಮಗಳಲ್ಲಿ ಪೊಲೀಸ್ ದೌರ್ಜನ್ಯ ದ ಬಗ್ಗೆ ವರದಿಯಾಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ .ಜಿ. ಪರಮೇಶ್ವರ್ ‘ಮಹಿಳೆಯರ,ವೃದ್ಧರ ಮೇಲೆ ಹಲ್ಲೆ ನಡೆಸಿದುದಕ್ಕೆ ವಿಷಾದ ವ್ಯಕ್ತ ಪಡಿಸುತ್ತೇನೆ. ಮಾಧ್ಯಮಗಳಲ್ಲಿ ನಾನು ನೋಡಿದ್ದೇನೆ. ಪೊಲೀಸರು ಸಂಯಮ ಮೀರಿ ವರ್ತಿಸಿದರೆ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದರು