ಇನ್ಮುಂದೆ ಸಿನಿಮಾ ಆರಂಭಕ್ಕೂ ಮೊದಲು ರಾಷ್ಟ್ರಗೀತೆ ಕಡ್ಡಾಯ: ಸುಪ್ರೀಂ ಆದೇಶ

0
702

ನವದೆಹಲಿ: ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿ ಸುಪ್ರೀಂಕೋರ್ಟ್ ಇಂದು ಆದೇಶ ಹೊರಡಿಸಿದೆ.

ಸುಪ್ರೀಂಕೋರ್ಟ್ ನ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಪೀಠ ಈ ಆದೇಶವನ್ನ ಹೊರಡಿಸಿದೆ.  ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನ ಕಡ್ಡಾಯವಾಗಿ ಪ್ರಸಾರ ಮಾಡಬೇಕು.ಎಲ್ಲರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸೂಚಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಶ್ಯಾಂ ನಾರಾಯಣ್ ಚೌಸ್ಕಿ ಎಂಬುವವರು ರಾಷ್ಟ್ರಗೀತೆ ಕಡ್ಡಾಯಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್  ದೇಶದ ಎಲ್ಲಾ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡಿ ಆದೇಶಿಸಿದೆ. ಇದು ದೇಶಭಕ್ತಿ ಹಾಗೂ ರಾಷ್ಟ್ರೀಯತೆಗೆ ಸಂಬಂಧಿಸಿದ ವಿಚಾರವಾಗಿದೆ. ಯಾವುದೇ ಕಾರಣಕ್ಕೂ ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಗೆ ಅಪಮಾನ ಮಾಡಬಾರದು ಎಂದು  ನ್ಯಾ.ದೀಪಕ್ ಮಿಶ್ರಾ ನೇತೃತ್ವದ ಪೀಠ  ಸೂಚನೆ ನೀಡಿದೆ.

1960ರ ದಶಕದಲ್ಲೂ ಭಾರತದ ಚಲನಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಲಾಗಿತ್ತು. ಬಳಿಕ 1990ರಲ್ಲಿ ಇದು ಮತ್ತೆ ಆಚರಣೆಗೆ ಬಂದಿತ್ತು. 2003ರಲ್ಲಿಯೂ ಮಹಾರಾಷ್ಟ್ರ ಸರ್ಕಾರ ಚಲನಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿತ್ತು.