ಚಿಕ್ಕ ಹಳ್ಳಿಯಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ವರೆಗೆ ಬೆಳೆಯಲು ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಹೋರಾಟ ಹಾಗೂ ಹಿನ್ನೆಲೆಯ ಏನು ಗೊತ್ತಾ?

0
350

ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಡಿಕೆ ಶಿವಕುಮಾರ್​ ರಾಜಕೀಯ ಜೀವನದಲ್ಲಿ ಸಾಕಷ್ಟು ಏಳು- ಬೀಳು ಅನುಭವಿಸಿ ಕಾಂಗ್ರೆಸ್ ಪಕ್ಷವನ್ನು ಮುನ್ನೆಡೆಸಿಕೊಂಡು ಬಂದಿದ್ದು, ಇದರ ಪ್ರತಿಫಲವಾಗಿ ಈಗ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಇದು ಕಾಂಗ್ರೆಸ್ ಕಾರ್ಯಕರ್ತರಿಗೆ ಹೊಸ ಹುರುಪು ತಂದಿದೆ ಎಂಬುದರಲ್ಲಿ ಸಂಶಯವಿಲ್ಲ. ಅದರಂತೆ 2018ರ ವಿಧಾನಸಭೆ ಚುನಾವಣೆಯಲ್ಲಿ ಮತಗಳ ವಿಭಜನೆಯಲ್ಲಿ 2013ರ ವಿಧಾನಸಭೆ ಚುನಾವಣೆಗಿಂತ ಶೇಕಡಾ 1.5ಕ್ಕೆ ಇಳಿದಿದ್ದ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದೆ. ಅದಕ್ಕಾಗಿ ಪಕ್ಷವನ್ನು ಬೆಳಸುವುದು ಡಿ.ಕೆ. ಶಿವಕುಮಾರ್ ಅವರ ಕೈಯಲ್ಲಿದೆ.

ಡಿ.ಕೆ.ಶಿವಕುಮಾರ್ ರಾಜಕೀಯವಾಗಿ ಬೆಳೆದು ಬಂದ ದಾರಿ:

ಟ್ರಬಲ್​ ಶೂಟರ್​ ಡಿಕೆ ಶಿವಕುಮಾರ್​ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗಿದ್ದಾರೆ. ಇವರು ಈ ಸ್ಥಾನಕ್ಕೆ ಏರಲು ಸಾಕಷ್ಟು ಶ್ರಮ ಪಟ್ಟಿದ್ದಾರೆ. ಕೇವಲ 21 ವರ್ಷವಾಗಿದ್ದಾಗಲೇ ರಾಜಕೀಯ ಪ್ರವೇಶ ಮಾಡಿದ ಡಿ.ಕೆ.ಶಿವಕುಮಾರ್ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸದ್ಯ, ಕರ್ನಾಟಕದ ಪ್ರಭಾವಿ ರಾಜಕಾರಣಿಗಳ ಪೈಕಿ ಇವರೂ ಒಬ್ಬರು. ಮೂಲತಃ ಇವರು ಕನಕಪುರದ ಉಯ್ಯಂಬಳ್ಳಿ ಹೋಬಳಿಯ ದೊಡ್ಡ ಆಲಹಳ್ಳಿ ಅವರ ಹುಟ್ಟೂರು. 1961, ಮೇ 15ರಂದು ಜನನ. ತಂದೆ ಕೆಂಪೇಗೌಡ, ತಾಯಿ ಗೌರಮ್ಮ. ಸಹೋದರ ಡಿ.ಕೆ.ಸುರೇಶ್ ಸಂಸದರು.

ಇವರು ಕನಕಪುರದ ಎಸ್ ಕರಿಯಪ್ಪನವರ ವಿದ್ಯಾಸಂಸ್ಥೆಯಲ್ಲಿ ಶಾಲಾ ಶಿಕ್ಷಣ ಪೂರೈಸಿದರು. ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಬಿ.ಎ ಪದವಿ ಪಡೆದರು. ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಎಂ.ಎ.ಪದವಿ ಪಡೆದಿದ್ದಾರೆ. ಅವರು 18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗದ ಎನ್‍ಎಸ್‍ಯುಐಗೆ ಸೇರ್ಪಡೆಯಾದರು. ಕೆಲ ದಿನಗಳಲ್ಲೇ ಜಿಲ್ಲಾ ಘಟಕದ ಅಧ್ಯಕ್ಷರೂ ಆದರು. ವಿದ್ಯಾಭ್ಯಾಸಕ್ಕೆಂದು ಬೆಂಗಳೂರು ಸೇರಿದ ಡಿ.ಕೆ.ಶಿವಕುಮಾರ್ ಆರ್‍ಸಿ ಕಾಲೇಜಿನಲ್ಲಿ ಓದುವಾಗಲೇ ಯುವ ಕಾಂಗ್ರೆಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾದರು. 1985ರಲ್ಲಿ ಸಾತನೂರು ವಿಧಾನಸಭಾ ಕ್ಷೇತ್ರದಿಂದ ಅಂದಿನ ಪ್ರಭಾವಿ ಜನತಾದಳದ ಮುಖಂಡರಾದ ಎಚ್.ಡಿ.ದೇವೇಗೌಡರ ವಿರುದ್ಧ ಡಿ.ಕೆ.ಶಿವಕುಮಾರ್ ಸ್ಪರ್ಧಿಸಿದ್ದರು.

1989ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸಾತನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡ ಅವರು 1991ರಲ್ಲಿ ಬಂಗಾರಪ್ಪ ಅವರು ಸರ್ವಾನುಮತದಿಂದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲು ಡಿ.ಕೆ.ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. ನಂತರ ಬಂಧಿಖಾನೆ ಇಲಾಖೆಯ ರಾಜ್ಯ ಸಚಿವರಾಗಿ ನೇಮಕವಾದರು. 1994ರಲ್ಲಿ ಬಂಡಾಯವಾಗಿ ಸ್ಪರ್ಧಿಸಿ ಜಯಗಳಿಸಿದ್ದರು. 2004ರಲ್ಲಿ ಸಾತನೂರು ವಿಧಾನಸಭಾ ಕ್ಷೇತ್ರದಿಂದ ನಾಲ್ಕನೆ ಬಾರಿಗೆ ಆಯ್ಕೆಯಾದರು. ಎಸ್.ಎಂ.ಕೃಷ್ಣ ಸರ್ಕಾರದಲ್ಲಿ ನಗರಾಭಿವೃದ್ಧಿ ಮತ್ತು ಸಹಕಾರ ಇಲಾಖೆಯಂತಹ ಪ್ರಮುಖ ಖಾತೆಗಳನ್ನು ನಿರ್ವಹಣೆ ಮಾಡಿ. ಜನಪ್ರಿಯತೆ ಗಳಿಸಿದರು.

ನಂತರ ಮಹಾರಾಷ್ಟ್ರದ ಸರ್ಕಾರ ಅಪಾಯಕ್ಕೆ ಸಿಲುಕಿ ಕುದುರೆ ವ್ಯಾಪಾರ ನಡೆಯುತ್ತಿದ್ದಾಗ ಅಲ್ಲಿನ ಕಾಂಗ್ರೆಸ್ ನಾಯಕರನ್ನು ಬೆಂಗಳೂರಿಗೆ ಕರೆತಂದು ಮಹಾರಾಷ್ಟ್ರ ಸರ್ಕಾರವನ್ನು ಉಳಿಸಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಇಂಧನ ಖಾತೆ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿ. 2018ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚಿಸಲು ಪ್ರಾಮುಖ್ಯ ಪಾತ್ರವಹಿಸಿದ ಅವರು ಜಲಸಂಪನ್ಮೂಲ ನಂತರ ಹೆಚ್ಚುವರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದರು. ಈ ಎಲ್ಲಾ ರಾಜಕೀಯ ಅನುಭವ ಹೊಂದಿದ ಅವರಿಗೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಕಟ್ಟಲು ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಿದೆ.