ನಾಳೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ..!

0
392

ನಾಳೆ  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೆ ರಾಜ್ಯಪಾಲರು ಹಸಿರು ನಿಶಾನೆ ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಳೆ ಮಧ್ಯಾಹ್ನ 12:20 ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ರಾಜಭವನದಿಂದ ಸೂಚನೆ ರವಾನೆಯಾಗಿದೆ ಎಂದು ಮೂಲಗಳು ಹೇಳಿವೆ.

ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗ, ನಮ್ಮ‌ಪಕ್ಷ 105 ಸದಸ್ಯರ ಬಲ ಹೊಂದಿದ್ದು, ಅತಿ ಹೆಚ್ಚು ಸಂಖ್ಯಾಬಲ ಇರುವ ಏಕೈಕ ಪಕ್ಷವಾಗಿದೆ. ಹೀಗಾಗಿ ಸರ್ಕಾರ ರಚನೆಗೆ ನಮಗೇ ಅವಕಾಶ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟಿದೆ.

ಯಡಿಯೂರಪ್ಪ ಅವರು ಇಂದು ಬೆಳಗ್ಗೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.

ಈ ಮಧ್ಯೆ, ಗುರುವಾರ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಮತ್ತು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುತ್ತೇನೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತ ರಾಣೆಬೆನ್ನೂರಿನಿಂದ ಕೆಪಿಜೆಪಿ ಪಕ್ಷದಿಂದ ಆಯ್ಕೆಯಾಗಿರುವ ಆರ್ ಶಂಕರ್ ಅವರು ಸಹ ಬಿಜೆಪಿಗೆ ಬೆಂಬಲ ನೀಡಿದ್ದು, ಯಡಿಯೂರಪ್ಪ ಅವರು ಕೆಪಿಜೆಪಿಯ ಶಂಕರ್ ಸೇರಿದಂತೆ ಒಟ್ಟು 105 ಶಾಸಕರ ಬೆಂಬಲ ಪತ್ರ ನೀಡಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಅಸಮಾಧಾನವಿರುವ ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಬಿಜೆಪಿ ಬೆಂಬಲಿಸಲು ಸಿದ್ಧರಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.