ಬೆಂಗಳೂರು: ನಗರದ ಬೆಳ್ಳಂದೂರು ಗೇಟ್ ಬಳಿ ಐದು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ದಿಢೀರನೆ ಕಟ್ಟಡ ಕುಸಿದುಬಿದ್ದಿದ್ದು, ಸುಮಾರು 8ಕ್ಕೂ ಹೆಚ್ಚು ಮಂದಿ ಅದರಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಘಟನಾ ಸ್ಥಳಕ್ಕೆ ಮೂರು ಅಗ್ನಿ ಶಾಮಕ ದಳದ ವಾಹನಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.
ಕಟ್ಟಡ ನಿರ್ಮಾಣಕ್ಕಾಗಿ ಸುಮಾರು 20ಕ್ಕೂ ಅಧಿಕ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು, ಈ ಪೈಕಿ ನಾಲ್ಕು ಮಂದಿಯನ್ನು ರಕ್ಷಿಸಲಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹಲವರು ಸಿಲುಕಿರಬಹುದಾದ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯ ಮುಂದುವರೆಸಲಾಗಿದೆ.
ಪ್ರತ್ಯಕ್ಷವಾಗಿ ನೋಡಿದವರ ಪ್ರಕಾರ ದೊಡ್ಡ ಸ್ಫೋಟದ ಶಬ್ದ ಕೇಳಿ ಬಂದ ನಂತರ ಕಟ್ಟಡ ಕುಸಿದಿದೆ ಎಂದು ತಿಳಿದುಬಂದಿದೆ. ಕುಸಿದು ಬಿದ್ದ ಕಟ್ಟಡ ಪಕ್ಕದಲ್ಲೇ ಇದ್ದ ಮತ್ತೊಂದು ಕಟ್ಟಡದ ಮೇಲೆ ಬಿದ್ದಿದ್ದುರಿಂದ ಆ ಕಟ್ಟಡಕ್ಕೂ ಕೂಡ ಹಾನಿಯಾಗಿದೆ ಎಂದು ತಿಳಿದುಬಂದಿದೆ.